ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ಭಕ್ತರ ಸುರಕ್ಷತೆ ದೃಷ್ಟಿಯಿಂದ ಅ.15 ರ ವರೆಗೆ ದ್ವಿಚಕ್ರ ವಾಹನಗಳಿಗೆ ತತ್ಕಾಲಿವಾಗಿ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶಿಸಿದ್ದಾರೆ.
ಮಲೆ ಮಾದಪ್ಪನ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಮಾತ್ರವಲ್ಲದೆ, ಹೊರ ಜಿಲ್ಲೆಗಳಿಂದ ಮತ್ತು ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಮಾದಪ್ಪನ ದರ್ಶನಕ್ಕೆ ಆಗಮಿಸುತ್ತಾರೆ.
ಅಷ್ಟೇ ಅಲ್ಲದೆ, ದೇವಾಲಯಕ್ಕೆ ಹೋಗುವ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಹನೂರು ತಾಲೂಕಿನ ಮಲೈ ಮಹದೇಶ್ವರಬೆಟ್ಟಕ್ಕೆ ಜಾತ್ರೆಗಾಗಿ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಅ.15 ರ ಸಂಜೆ 7 ಗಂಟೆ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶಿಸಲಾಗಿದೆ.