ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡದವರಿಗೆ ಶೇ 65 ರಷ್ಟು ಸೀಟುಗಳು
ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.
ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್
ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ ಎಂದರು. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದರು.
ಪಕ್ಷ ತೀರ್ಮಾನಿಸುತ್ತದೆ
ಲೋಕಸಭೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಅವರೇ 5 ವರ್ಷಗಳು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಪಕ್ಷದ ವರಿಷ್ಠರರು ತೀರ್ಮಾನ ಮಾಡುತ್ತಾರೆ ಎಂದರು.