ಬೆಂಗಳೂರು: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಈಗಲೂ ಕಾಲ ಮಿಂಚಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್ ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸಂಸದರು ಈ ವಿಷಯವಾಗಿ ಪ್ರಧಾನಿ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ, ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಪ್ರಾಬಲ್ಯ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ ಎಂದು ಟೀಕಿಸಿದ್ದಾರೆ.