ಮೈಸೂರು : ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸವಲತ್ತು, ಸೌಲಭ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಸೂಚಿಸಿದರು.
ಇಂದು ಶುಕ್ರವಾರ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಆರ್ಥಿಕ ವರ್ಷದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿಸೆಂಬರ್-2024ರ ಅಂತ್ಯಕ್ಕೆ ಎಲ್ಲಾ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಶೇಕಡ 100 ರಷ್ಟು ಪ್ರಗತಿ ಸಾಧಿಸುವ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ವಹಿಸಲು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಸೊಸೈಟಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಡಳಿತಾತ್ಮಕ ಅನುಮೋದನೆ ನೀಡಿ, ಸಮುದಾಯ ಮಟ್ಟದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಿರ್ದೇಶನ ನೀಡಿದರು.
ತಾಯಿ ಮರಣ ಮತ್ತು ಶಿಶು ಮರಣಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮುದಾಯ ಮತ್ತು ಸಾಂಸ್ಥಿಕ ಮಟ್ಟದಲ್ಲಿ ವಿಮರ್ಶಾತ್ಮಕ ಪರಿಶೋಧನೆ ನಡೆಸಿ, ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಕ್ರಮವಹಿಸಲು ಸೂಚಿಸಿದರು.
District early intervention centre ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು ಹಾಗೂ ಸದರಿ ಕಾರ್ಯಕ್ರಮದಡಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾದ ಫಲಾನುಭವಿಗಳ ಸಂಕ್ಷಿಪ್ತ ವಿವರದೊಂದಿಗೆ ಪರಿಶೀಲನೆ ನಡೆಸಿದರು ಹಾಗೂ ಆರ್.ಬಿ.ಎಸ್.ಕೆ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದರು.
2024-25ನೇ ಸಾಲಿನ ಅಕ್ಟೋಬರ್-24ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಕುಮಾರಸ್ವಾಮಿ, ಜಿಪಂ ಮುಖ್ಯ ಯೋಜನಾಧಿಕಾರಿಗಳು, ಎಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.