ನವದೆಹಲಿ(Newdelhi): ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ನವದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಿದರು.
ಪಕ್ಷದ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಪಕ್ಷದ ಅತ್ಯುನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ಅವರು ಸಂಸದ ಶಶಿ ತರೂರ್ ಅವರನ್ನು ಮಣಿಸಿದ್ದರು.
ಸಮಾರಂಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ನಾಯಕರು ಮತ್ತು ಸಂಸದರು ಉಪಸ್ಥಿತರಿದ್ದರು.
ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಖರ್ಗೆ ಅವರು ಇಂದು ಬೆಳಗ್ಗೆ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
ಇದೇ ವೇಳೆ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೂ ನಮನ ಸಲ್ಲಿಸಿದರು.