ಮನೆ ರಾಜ್ಯ ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆ

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆ

0

ಬೆಂಗಳೂರು:ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಡಿಸೆಂಬರ್‌ 20ರಿಂದ ಮೂರು ದಿನ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಬಹುದು ಎಂಬುದು ಭಾರೀ ಕುತೂಹಲ ಮೂಡಿಸಿತ್ತು.

Join Our Whatsapp Group


ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಅಂತಿಮಗೊಳಿಸಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.


ಎಲ್ಲಾ ನೆಲೆಗಳಿಂದಲೂ ಕೂಲಂಕಷವಾಗಿ ಚರ್ಚಿಸಿ ಸರ್ವಾನುಮತದಿಂದ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೊಂಡೇದಹಳ್ಳಿಯಲ್ಲಿ 1930ರ ಮೇ 18ರಂದು ಗೊ.ರು. ಚನ್ನಬಸಪ್ಪನವರು ಜನಿಸಿದರು.
ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಮಹಾದೇವಿ,ಸದಾಶಿವ ಶಿವಾಚಾರ್ಯ, ಗ್ರಾಮಗೀತೆಗಳು, ಹೊನ್ನ ಬಿತ್ತೇವು ನೆಲಕೆಲ್ಲ,,ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.
ಪತ್ರಿಕಾವೃತ್ತಿಯನ್ನೂ ಮಾಡಿರುವ ಗೊರುಚ ಅವರು, ‘ಜಾನಪದ ಜಗತ್ತು’, ಪಂಚಾಯತ್ ರಾಜ್ಯ',ಕನ್ನಡ ಸಾಹಿತ್ಯ ಪರಿಷತ್ ಪತ್ರಿಕೆ’ ಮೊದಲಾದ ಪತ್ರಿಕೆಗಳ ಸಂಪಾದಕರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ.


ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲ,ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವಲ್ಲಿ ನಿರ್ವಹಿಸಿದ ಪಾತ್ರ ಮುಖ್ಯವಾದುದು.ಅವರು ಕರ್ನಾಟಕ ಜನಪದ ಕಲೆಗಳು ಎಂಬ ಕೃತಿಯನ್ನು ಸಂಪಾದಿಸಿದ್ದು, ೧೯೯೨ ರಿಂದ ೧೯೯೫ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (೧೯೯೩), ಮಂಡ್ಯ (೧೯೯೪), ಮುಧೋಳಗಳಲ್ಲಿ (೧೯೯೫) ೬೨, ೬೩, ೬೪ನೇ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದು, ಅನೇಕ ಮೌಲಿಕ ಗ್ರಂಥಗಳನ್ನೂ ಪ್ರಕಟಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದರು.
ಸಮ್ಮೇಳನಕ್ಕೆ ಅಗತ್ಯ ಸಿದ್ಧತೆಯಲ್ಲಿ ಸರ್ಕಾರ, ಕಸಾಪ ಸರಿಯಾಗಿ ಇನ್ನೊಂದು ತಿಂಗಳಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಅದ್ಧೂರಿ ಸಮ್ಮೇಳನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಸರ್ಕಾರವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮೂರು ದಿನಗಳ ಕಾಲ ಯಾವ ವ್ಯತ್ಯಾಸಗಳು ಆಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲು ಜಿಲ್ಲಾಡಳಿತ ಸಜ್ಜಾಗಿದೆ.


ಲಕ್ಷಾಂತರ ಕನ್ನಡಾಭಿಮಾನಿಗಳು ಈ ಸಮ್ಮೇಳನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಸಮ್ಮೇಳನದಲ್ಲಿ ಸನ್ಮಾನ, ಪುಸ್ತಕ ಬಿಡುಗಡೆ, ಕನ್ನಡ ನೆಲ ಜಲ ಕುರಿತು ಚರ್ಚೆ, ಸಂವಾದ ಜೊತೆಗೆ ಮಹತ್ವ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ.ರಾಜಕೀಯ ಗಣ್ಯರು ಸೇರಿದಂತೆ ಅನೇಕ ಹಿರಿಯ ಸಾಹಿತ್ಯಗಳು,ಕನ್ನಡಪರ ಹೋರಾಟಗಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಳೆದ ವರ್ಷ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಧ್ಯ ಕರ್ನಾಟಕ ಜಿಲ್ಲೆ ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ನಡೆದಿತ್ತು.ಅಂದು ಹಿರಿಯ ಸಾಹಿತಿ ದೊಡ್ಡರಂಗೇಗೌಡರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.ಈ ಬಾರಿಯ ಮಂಡ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಗೊ.ರು.ಚನ್ನಬಸಪ್ಪ ಅವರು ವಹಿಸಲಿದ್ದಾರೆ.