ಮನೆ ರಾಜ್ಯ ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ:  ಸಿ.ಎಂ ಸಿದ್ದರಾಮಯ್ಯ

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ:  ಸಿ.ಎಂ ಸಿದ್ದರಾಮಯ್ಯ

0

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು.

Join Our Whatsapp Group

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌,  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಶ್ರೀ ಚಾಮುಂಡೇಶ್ವರಿ ಬಸಪ್ಪನವರ ಪುಣ್ಯಕ್ಷೇತ್ರ
ಮುಂದಿನ ಲೇಖನಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್: ಸಿಎಂ ಸಿದ್ದರಾಮಯ್ಯ