ಮನೆ ರಾಷ್ಟ್ರೀಯ ಮನಮೋಹನ್‌ ಸಿಂಗ್‌ ವಿಧಿವಶ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

ಮನಮೋಹನ್‌ ಸಿಂಗ್‌ ವಿಧಿವಶ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

0

ಹೊಸದಿಲ್ಲಿ/ ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ (92 ವರ್ಷ) ಗುರುವಾರ ರಾತ್ರಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.

Join Our Whatsapp Group

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲೂ ಕಾಂಗ್ರೆಸ್‌ ನೇತೃತ್ವದ ಸರಕಾರವೂ ಏಳು ದಿನಗಳ ಶೋಕಾಚರಣೆ ಘೋಷಿಸಿದ್ದು,  ಶುಕ್ರವಾರ (ಡಿ. 27) ಸರ್ಕಾರಿ ರಜೆ ಘೋಷಿಸಿದ್ದು, ಶಾಲೆ, ಕಾಲೇಜುಗಳು ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ.

ಕೇಂದ್ರ ಸರಕಾರ ನಾಳೆ ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳ ರದ್ದುಗೊಳಿಸಿ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿ ನಾಳೆ ಬೆಳಗ್ಗೆ 11 ಗಂಟೆಗೆ ತುರ್ತು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ ಡಾ. ಮನಮೋಹನ್ ಸಿಂಗ್ ಅವರಿಗೆ ಗೌರವ ನಮನಗಳ ಸಲ್ಲಿಸಲಿದೆ ಎಂದು ತಿಳಿಸಿದೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿ, ಮನಮೋಹನ್​ ಸಿಂಗ್ ಕೊಡುಗೆ ಮರೆಯಲು ಸಾಧ್ಯವಿಲ್ಲ. ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ. ವರಿಷ್ಠರ ಜೊತೆ ಚರ್ಚಿಸಿ ಮುಂದೆ ಕಾರ್ಯಕ್ರಮ ಮಾಡುತ್ತೇವೆ. ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ ಆಚರಿಸಲಾಗುತ್ತದೆ. ನಾಳೆ ನಾನು, ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ದೆಹಲಿಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.

ಗೌರವ ಸಮರ್ಪಣೆ ಕಾರ್ಯಕ್ರಮ ಆಯೋಜನೆ: ಡಿಕೆಶಿ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಡಿ.27ರಂದು ನಗರದ ಸಿಪಿಎಡ್‌ ಮೈದಾನದಲ್ಲಿ ಬೆಳಗ್ಗೆ 10.30ಕ್ಕೆ ಗೌರವ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಶುಕ್ರವಾರ ಸಿಪಿಎಡ್‌ ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷದ ಬೃಹತ್‌ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈಗ ಕಾರ್ಯಕ್ರಮ ರದ್ದು ಮಾಡಿರುವ ಕಾರಣ ಇದೇ ವೇದಿಕೆಯಲ್ಲಿ ಗೌರವ ಸಮರ್ಪಣೆ ಕಾರ್ಯಕ್ರಮ ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಈಗ ಮಾಡಲಾಗಿರುವ ದೀಪಾಲಂಕಾರ ಮುಂದುವರಿಸಬೇಕೇ ಬೇಡವೇ ಎಂಬುದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.