ನವದೆಹಲಿ: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ನಾಯಕರು ಶುಕ್ರವಾರ ಬೆಳಗ್ಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ರಾಜಕೀಯ ಕ್ಷೇತ್ರದ ಅನೇಕ ನಾಯಕರು ಸಂತಾಪ ಸೂಚಿಸಿದರು. ತೀವ್ರ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ರಾಷ್ಟ್ರದ ಪ್ರಗತಿಗೆ ಡಾ. ಸಿಂಗ್ ಅವರ ಅಪಾರ ಕೊಡುಗೆಯನ್ನು ಶ್ಲಾಘಿಸಿದರು.
“ಡಾ. ಮನಮೋಹನ್ ಸಿಂಗ್ ನಾಯಕರಾಗಿ ಅವರ ಸಮಗ್ರತೆ ಹಾಗೂ ದೃಷ್ಟಿಕೋನ ಭಾರತದ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ” ಎಂದು ಪ್ರಧಾನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂತಿಮ ನಮನ ಸಲ್ಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಡಾ. ಸಿಂಗ್ ಒಬ್ಬ ರಾಜನೀತಿಜ್ಞ ಮತ್ತು ಭಾರತದ ಆಧುನಿಕ ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಒಬ್ಬ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಎಂದು ಹೇಳಿದರು.