ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ಯತ್ನಾಳ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಮೂರು ತಂಡಗಳ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ ತೀವ್ರಗೊಂಡಿದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿಯಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದರು.
ಬಿಜೆಪಿಯ ಹತ್ತಾರು ಶಾಸಕರು ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತು ಚರ್ಚೆ ನಡೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರುವವರು ಸನ್ಯಾಸಿಗಳಲ್ಲ. ಇಲ್ಲಿಗೆ ಬಂದ ಮೇಲೆ ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕಾಗುತ್ತದೆ. ಈ ಕುರಿತು ಪಕ್ಷದ ವರಿಷ್ಠರ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಮಾಜಿ ಸಿಎಂ ಯಡಿಯೂರಪ್ಪ ಅವರು ಬಿಜೆಪಿ ಶುದ್ಧೀಕರಣ ಮಾಡುವ ಕೆಲಸ ಮಾಡಲಿ. ಅದು ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸುವಂತಹ ಗೋಡೆಗೆ ತಲೆ ಜಜ್ಜಿಕೊಳ್ಳುವ ಕೆಲಸ ಮಾಡಬಾರದು ಎಂದು ಹೇಳಿದರು.
ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿಯವರು ಅನವಶ್ಯಕ ಹೇಳಿಕೆ ಕೊಡುತ್ತಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡಿದ್ದಾರೆ. ಅದಕ್ಕೆ ಕೇಸ್ ದಾಖಲಾಗಿದೆ. ಬಿಜೆಪಿಯವರು ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬಾರದು ಎಂದರು.