ಚಂಡೀಗಢ: ಪಂಜಾಬ್ ರಾಜ್ಯದ ಶ್ರೀ ಮುಕ್ತಸರ್ ಸಾಹಿಬ್ ಜಿಲ್ಲೆಯ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿ ಎರಡು ಅಂತಸ್ತಿನ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ ಐವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಮಾರು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಎರಡು ಅಂತಸ್ತಿನ ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದೆ. ಸ್ಫೋಟದ ಶಬ್ದ ಹಲವಾರು ಕಿಲೋಮೀಟರ್ ದೂರಕ್ಕೂ ಕೇಳಿಸಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಇನ್ನೂ ಕೆಲ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದ್ದು, ಅಗ್ನಿಶಾಮಕ ದಳ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸದಸ್ಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸ್ಫೋಟದ ತಕ್ಷಣ ಸ್ಥಳೀಯ ನಿವಾಸಿಗಳು ಹಾಗೂ ಕಾರ್ಮಿಕರ ಕುಟುಂಬಸ್ಥರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು. ಗಾಯಗೊಂಡವರನ್ನು ತಕ್ಷಣ ಬಟಿಂಡಾ ಎಐಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
ಘಟನೆಯ ಕುರಿತು ಲಂಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಿ, “ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿದೆ. ಕಾರ್ಖಾನೆಗೆ ಸೂಕ್ತ ಪರವಾನಗಿ ಇದ್ದಿತ್ತೇ ಎಂಬುದರ ಬಗ್ಗೆ ಕೂಡ ಪರಿಶೀಲನೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ಭದ್ರತೆ ಒದಗಿಸಲಾಗಿದ್ದು, ಸ್ಥಳೀಯ ಪೊಲೀಸರು ಮತ್ತು ಹೆವಿ ರೆಸ್ಕ್ಯೂ ತಂಡಗಳು ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಶ್ರಮಿಸುತ್ತಿವೆ. ಕೆಲವು ಕಾರ್ಮಿಕರ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಮೃತರ ಸಂಖ್ಯೆ ಹೆಚ್ಚಾಗಬಹುದೆಂಬ ಆತಂಕಕ್ಕೆ ಕಾರಣವಾಗಿದೆ.














