ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೇಂದ್ರ ಕೋಲ್ಕತ್ತಾ ನಗರದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ಕೋಲ್ಕತ್ತಾ ನಗರದ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿರುವ ಹೋಟೆಲ್ನಲ್ಲಿ ಸಂಭವಿಸಿದ್ದು, ಇದರಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ರಕ್ಷಣಾ ದಳಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಇದುವರೆಗೆ 14 ಶವಗಳನ್ನು ಪತ್ತೆ ಹಚ್ಚಲಾಗಿದೆ. ಇನ್ನೂ ಹಲವಾರು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಲೀಕ್ ಕಾರಣವಾಗಿರಬಹುದೆಂಬ ಅಂದಾಜು ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಘಟನೆಗೂ ಮುನ್ನ ಮತ್ತು ನಂತರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ.
ಘಟನೆಯ ಕುರಿತು ಕೇಂದ್ರ ಸಚಿವ ಹಾಗೂ ಪಶ್ಚಿಮ ಬಂಗಾಳ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವನ್ನೂ ಒದಗಿಸಲು ಸೂಚನೆ ನೀಡಿದ್ದಾರೆ. “ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದ್ದಾರೆ.”
ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಈ ಕಟ್ಟಡದಲ್ಲಿ ಯಾವುದೇ ಸುರಕ್ಷತಾ ವ್ಯವಸ್ಥೆ ಇರಲಿಲ್ಲ. ನಿಗಮ ಈ ಬಗ್ಗೆ ಏನು ಮಾಡುತ್ತಿದೆ ಎಂಬುದು ನಮಗೆ ತಿಳಿದಿಲ್ಲ. ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಇದು ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತ,” ಎಂದು ಅವರು ಹೇಳಿದರು.














