ನವದೆಹಲಿ (New Delhi ): ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವದಿಂದ ಮಯಾಂಕ್ ಅಗರ್ವಾಲ್ ತೆಗೆಯಲಾಗುತ್ತಿದೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಸ್ಪಷ್ಟನೆ ನೀಡಿದೆ.
ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ನಾಯಕತ್ವಕ್ಕೆ ಸಂಬಂಧಿಸಿದ ವರದಿಗಳು ಕಳೆದ ಕೆಲ ದಿನಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ ಈ ವಿಷಯದ ಬಗ್ಗೆ ನಾವು ಯಾವುದೇ ಅಧಿಕೃತ ಹೇಳಿಕೆಯನ್ನು ಪ್ರಕಟಿಸಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ವದಂತಿಗಳಿಗೆ ತೆರೆ ಎಳೆದಿದೆ.
ಕಳೆದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಪಂಜಾಬ್ ಕಿಂಗ್ಸ್ ತಂಡ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ಲೇ ಆಫ್ಸ್‌ಗೆ ಅರ್ಹತೆ ಪಡೆದಿರಲಿಲ್ಲ. ಮತ್ತೊಂದೆಡೆ ನಾಯಕ ಮಯಾಂಕ್ ಅಗರ್ವಾಲ್ ಕೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು.
ಮಯಾಂಕ್ ಅಗರ್ವಾಲ್ ಅವರನ್ನು ಪಂಜಾಬ್ ಕಿಂಗ್ಸ್ ನಾಯಕತ್ವದಿಂದ ಕೈ ಬಿಡುವ ಬಗ್ಗೆ ಸಿದ್ದತೆ ನಡೆಯುತ್ತಿದೆ. ಮತ್ತೊಂದೆಡೆ, ಕೋಚಿಂಗ್ ಆಯ್ಕೆಗಳಿಗಾಗಿ ಟ್ರೆವೊರ್ ಬೇಲಿಸ್ ಹಾಗೂ ಇಯಾನ್ ಮಾರ್ಗನ್ ಅವರ ಜೊತೆ ಪಂಜಾಬ್ ಕಿಂಗ್ಸ್ ನಿರಂತರ ಸಂಪರ್ಕದಲ್ಲಿದೆ ಎಂದು ಸುದ್ದಿಯಾಗಿತ್ತು.
ಪಂಜಾಬ್ ಫ್ರಾಂಚೈಸಿ ಇನ್ನೂ ಯಾರ ಹೆಸರನ್ನೂ ಅಂತಿಮಗೊಳಿಸಿಲ್ಲ. ಇನ್ನೊಂದು ವಾರದಲ್ಲಿ ನೂತನ ಕೋಚ್ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.