ಲಖನೌ(Lucknow) : ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಬೆಂಬಲ ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮಾಯಾವತಿ, ಬುಡಕಟ್ಟು ಸಮಾಜವು ಪಕ್ಷದ ಚಳವಳಿಯ ಪ್ರಮುಖ ಭಾಗವಾಗಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಬಿಎಸ್‌ಪಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈ ನಿರ್ಧಾರ ಇದು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲಿಸುವ ಅಥವಾ ವಿರೋಧ ಪಕ್ಷ ಯುಪಿಎ ವಿರುದ್ಧವಲ್ಲ. ಬದಲಿಗೆ ನಮ್ಮ ಪಕ್ಷ ಹಾಗೂ ಆಂದೋಲನವನ್ನು ಗಮನದಲ್ಲಿಟ್ಟುಕೊಂಡು ಸಮರ್ಥ ಹಾಗೂ ಸಮರ್ಪಿತ ಬುಡಕಟ್ಟು ಮಹಿಳೆಯನ್ನು ದೇಶದ ರಾಷ್ಟ್ರಪತಿಯಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯಾದರೆ, ಈ ಹುದ್ದೆ ಅಲಂಕರಿಸಲಿರುವ ಮೊದಲ ಬುಡಕಟ್ಟು ನಾಯಕಿ ಹಾಗೂ ಎರಡನೇ ಮಹಿಳೆ ಎನಿಸಿಕೊಳ್ಳಲಿದ್ದಾರೆ. ವಿರೋಧ ಪಕ್ಷಗಳು ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಾಗ ತಮ್ಮ ಪಕ್ಷದ ಜೊತೆ ಸಮಾಲೋಚಿಸಿಲ್ಲ. ಆದ್ದರಿಂದ ರಾಷ್ಟ್ರಪತಿ ಚುನಾವಣೆಯಲ್ಲಿ ನಿರ್ಧಾರ ತೆಗೆದುಕೊಳ್ಳಲು ತಮ್ಮ ಪಕ್ಷ ಸ್ವತಂತ್ರವಾಗಿದೆ ಎಂದು ಸಮರ್ಥಿಸಿಕೊಂಡರು.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ ಸೇರಿದಂತೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಅಖಾಡಕ್ಕಿಳಿಸಿದೆ.