ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 25,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು.
ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13,500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು, ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್‍ನಿಂದ 4 ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ.
ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಸಿಎಂ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು. ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕು ಎಂದರು.
ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ. ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು, ಇದಕ್ಕೆ ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 25 ಲಕ್ಷ ರೂ.ಗಳನ್ನು ಹಂಚಿಕೆ ಮಾಡಿದ್ದಾರೆ. ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣ ಮತ್ತು ವೀರಣ್ಣ ಕಡಾಡಿ ಕೂಡ ಹಣವನ್ನು ಹಂಚಿಕೆ ಮಾಡಿದ್ದಾರೆ. ಒಟ್ಟು ರೂ.3.10ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿಲಾಗಿದೆ ಎಂದ ಹೇಳಿದರು.
ಈ ಹೈಟೆಕ್ ಶಾಲೆಯು ನನ್ನೂರು ಮತ್ತು ಸುತ್ತಮುತ್ತಲಿನ ಇತರ ಹಳ್ಳಿಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಿದೆ. ಈ ಹಳ್ಳಿಗಳಲ್ಲಿ ಜನಸಂಖ್ಯೆಯ ಪ್ರಮುಖ ಭಾಗವಾಗಿರುವ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಯ ಜನರು ಕಡುಬಡವರಾಗದ್ದಾರೆ. ಸಾಕಷ್ಟು ಮಂದಿ ಸೌಲಭ್ಯಗಳ ಕೊರತೆಯಿಂದಾಗಿ ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ನಂತರ ಶಿಕ್ಷಣವನ್ನು ನಿಲ್ಲಿಸುತ್ತಿದ್ದಾರೆ. ಈ ಶಾಲೆಯು ಅವರ ಶಿಕ್ಷಣವನ್ನು ಮುಂದುವರಿಸಲು ಮತ್ತು ಉತ್ತಮ ಉದ್ಯೋಗಗಳನ್ನು ಪಡೆಯಲು ಪ್ರೇರೇಪಿಸಲಿದೆ ಎಂದು ತಿಳಿಸಿದರು.