ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಚಿತ್ರದುರ್ಗದ ಐಡಿಯಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಸಿ.ಎಂ. ಇರ್ಫಾನುಲ್ಲಾ ಷರೀಫ್ ಹಾಗೂ ಕಲಬುರಗಿಯ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಿಣಿ ಅಪ್ಪಾ ಸೇರಿ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ.
ಗುರುವಾರ ಮೈಸೂರಿನ ಮುಕ್ತ ವಿ.ವಿ. ಭವನದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಇಪ್ಪತ್ತನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋತ್ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಪತಿ ಶರಣಪ್ಪ ವಿ. ಹಲಸೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದೇ ವೇಳೆ ೧೭,೩೦೭ ಮಂದಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರದಲ್ಲಿ ಮಂತ್ರಿ ಸ್ಥಾನದಲ್ಲಿರುವವರಿಗೆ ಡಾಕ್ಟರೇಟ್ ಪದವಿ ನೀಡಿರುವುದು ಎಷ್ಟು ಸರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕುಲಪತಿಗಳು ಮಾನವ ಬಂಧುತ್ವ ವೇದಿಕೆ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಡುತ್ತಿರುವ ಸಮಾಜಸೇವೆಯನ್ನು ಗುರುತಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೇ ೪೧ ಜನರಿಗೆ ಪಿಹೆಚ್.ಡಿ, ೧೭,೩೦೭ ಜನರಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ನೀಡಲಾಗುತ್ತಿದೆ ಎಂದು ಹೇಳಿದರು.















