ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಶಾಸಕರು ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡಬಾರದು, ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತ ನಾಡುವ ವೇಳೆ ಅವರು ಶಾಸಕರಿಗೆ ಈ ಎಚ್ಚರಿಕೆ ನೀಡಿದ್ದಾರೆ.
ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದ ಸಚಿವರ ರಾಜೀನಾಮೆ ಪಡೆ ಯಲಿ ಎನ್ನುವ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಹೇಳಿಕೆ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಡಿಕೆಶಿ ಈ ಎಚ್ಚರಿಕೆ ನೀಡಿದರು.
ಚುನಾವಣೆಯ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲ ನಾಯಕರ ಜತೆ ಪರಾಮರ್ಶನ ಸಭೆ ನಡೆಸಲಾಗುವುದು. ಜನರ ತೀರ್ಪು ನಮಗೆ ಎಚ್ಚರಿಕೆಯ ಘಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಸರಿಪಡಿಸಿಕೊಳ್ಳಬೇಕು ಎಂದರು.
ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತ ಪಡಿಸಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಿದಾಗ, ನಾವು 14ರಿಂದ 15 ಸ್ಥಾನ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿತ್ತು. ಆದರೆ ನಿರೀಕ್ಷಿತ ಸ್ಥಾನಗಳನ್ನು ಗಳಿಸಲು ವಿಫಲರಾಗಿದ್ದೇವೆ. ಜನರ ತೀರ್ಪಿಗೆ ತಲೆಬಾಗಲೇ ಬೇಕು ಎಂದರು.