ಮೈಸೂರು(Mysuru): ಇಂದು ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದು, ಇತಿಹಾಸದಲ್ಲಿಯೇ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿಯಾಗಲಿದ್ದಾರೆ.
8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸುತ್ತಿರುವ ಪ್ರಧಾನಿಗಳಿಗೆ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಬೇಕು ಎನ್ನುವ ಉದ್ದೇಶದಿಂದ ಮನವಿ ಮಾಡಿದ್ದು, ಅದರಂತೆ ಇದೀಗ ಚಾಮುಂಡಿಬೆಟ್ಟಕ್ಕೆ ಮೋದಿಯವರು ಭೇಟಿ ನೀಡುತ್ತಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ದೇಗುಲದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿರುವ ಮೊದಲ ಪ್ರಧಾನಿ “ಸಾಮಾನ್ಯವಾಗಿ ಮೈಸೂರಿಗೆ ಆಗಮಿಸಿದವರು ಚಾಮುಂಡಿಬೆಟ್ಟಕ್ಕೆ ತೆರಳಿ ಶಕ್ತಿದೇವತೆ ಚಾಮುಂಡೇಶ್ವರಿಯ ದರ್ಶನ ಮಾಡದೆ ತೆರಳುವುದು ಅಪರೂಪ. ಈಗಾಗಲೇ ಹಲವು ರಾಜ್ಯ ಮತ್ತು ಹೊರ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ರಾಜ್ಯಪಾಲರು, ಕೇಂದ್ರ ಸಚಿವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಾಮುಂಡೇಶ್ವರಿಯ ದರ್ಶನ ಪಡೆದಿರುವುದು ಮಾತ್ರವಲ್ಲದೆ ಹರಕೆಯನ್ನು ಸಲ್ಲಿಸಿ ಹೋಗಿದ್ದಾರೆ. ಆದರೆ ಇದುವರೆಗೆ ಪ್ರಧಾನ ಮಂತ್ರಿಗಳು ತಮ್ಮ ಅಧಿಕಾರದ ಅವಧಿಯಲ್ಲಿ ಇಲ್ಲಿಗೆ ಆಗಮಿಸಿಲ್ಲ ಎನ್ನಲಾಗಿದ್ದು, ಮೋದಿಯವರೇ ಪ್ರಥಮವಾಗಿ ಭೇಟಿ ನೀಡುತ್ತಿರುವ ಪ್ರಧಾನಿ ಎಂದು ತಿಳಿಸಿದ್ದಾರೆ.
ಚಾಮುಂಡಿಬೆಟ್ಟಕ್ಕೆ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೆ ಭದ್ರತಾ ಹಿತದೃಷ್ಟಿಯಿಂದ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಭಕ್ತಾಧಿಗಳಿಗೆ ಚಾಮುಂಡಿಬೆಟ್ಟ ಹಾಗೂ ಶ್ರೀಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಚಾಮುಂಡಿಬೆಟ್ಟದ ನಿವಾಸಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಬೇಕಾದರೆ ವಾಸಸ್ಥಳದ ಗುರುತಿನ ಚೀಟಿ ಬಳಸುವುದು ಕಡ್ಡಾಯವಾಗಿದೆ.