ಮನೆ ಕ್ರೀಡೆ ರಣಜಿ ಟ್ರೋಫಿ ಪಂದ್ಯದ ಮೂಲಕ ಕಂಬ್ಯಾಕ್​ ಆಗಲಿರುವ ಮೊಹಮ್ಮದ್ ಶಮಿ

ರಣಜಿ ಟ್ರೋಫಿ ಪಂದ್ಯದ ಮೂಲಕ ಕಂಬ್ಯಾಕ್​ ಆಗಲಿರುವ ಮೊಹಮ್ಮದ್ ಶಮಿ

0

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಂಬ್ಯಾಕ್ ​ಗೆ ದಿನಾಂಕ ನಿಗದಿಯಾಗಿದೆ. ಕಳೆದ 7 ತಿಂಗಳುಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ಶಮಿ ಅಕ್ಟೋಬರ್ 11 ರಂದು ನಡೆಯಲಿರುವ ರಣಜಿ ಟ್ರೋಫಿ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವುದು ಖಚಿತವಾಗಿದೆ.

Join Our Whatsapp Group

ರಣಜಿ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಬಂಗಾಳ ಪರ ಆಡಲಿದ್ದು, ಅದರಂತೆ ಅಕ್ಟೋಬರ್ 11 ರಂದು ಜರುಗಲಿರುವ ಉತ್ತರ ಪ್ರದೇಶ ವಿರುದ್ಧದ ಪಂದ್ಯದ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ. ವಿಶೇಷ ಎಂದರೆ ಈ ಪಂದ್ಯದ ಬೆನ್ನಲ್ಲೇ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸಹ ಆರಂಭವಾಗುತ್ತಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಹೀಗಾಗಿ ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಶಮಿ ಕಣಕ್ಕಿಳಿದರೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವುದು ಬಹುತೇಕ ಖಚಿತ. ಹೀಗಾಗಿ ಕಿವೀಸ್ ವಿರುದ್ಧದ ಸರಣಿಯಲ್ಲಿ ಶಮಿ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಸದ್ಯ ಮೊಹಮ್ಮದ್ ಶಮಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿರುವ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

ಟೀಮ್ ಇಂಡಿಯಾದಿಂದ ಹೊರಗುಳಿಯಲು ಕಾರಣವೇನು?

2023ರ ಏಕದಿನ ವಿಶ್ವಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಶಮಿ, ವರ್ಲ್ಡ್ ಕಪ್ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು. ಏಕದಿನ ವಿಶ್ವಕಪ್​ ವೇಳೆ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿತ್ತು.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶಮಿ ಅಭ್ಯಾಸವನ್ನು ಶುರು ಮಾಡಿದ್ದಾರೆ.

ಇನ್ನು ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಹೀಗಾಗಿ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮೂಲಕ ಅವರು ಭಾರತದ ಪರ ಮತ್ತೆ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.