ಮನೆ ರಾಜ್ಯ ರಾಜ್ಯದಲ್ಲಿ ಮುಂಗಾರು ಚುರುಕು: ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂಗಾರು ಚುರುಕು: ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ

0

ಬೆಂಗಳೂರು (Bengaluru): ರಾಜ್ಯದ ಮುಂಗಾರು ಚುರುಕುಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿದೆ.

ಕರಾವಳಿಯ ಕೆಲವೆಡೆ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಶಿರಸಿ, ಸಿದ್ದಾಪುರ ಮತ್ತು ಜೊಯಿಡಾ ತಾಲ್ಲೂಕುಗಳಲ್ಲಿ ಶಾಲಾ–ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 8 ಹಾಗೂ 9ರಂದು ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಗುರುವಾರ ಧಾರಾಕಾರ ಮಳೆ ಸುರಿದಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಕುಂದಾಪುರ ತಾಲ್ಲೂಕಿನ ಗೋಳಿಹೊಳೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 27.8 ಸೆಂ.ಮೀ ಮಳೆಯಾಗಿದೆ.

ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 10,015 ಕ್ಯುಸೆಕ್‌ಗೆ ಏರಿಕೆಯಾಗಿದೆ. 15,560 ಕ್ಯುಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದ ನೀರಿನ ಮಟ್ಟ ಗುರುವಾರ ಒಂದೇ ದಿನ 3.08 ಅಡಿಯಷ್ಟು ಏರಿಕೆಯಾಗಿದೆ.

ಹೊನ್ನಾಳಿ: ನಾಲ್ಕೈದು ದಿನಗಳಿಂದ ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದರಿಂದ ಈ ಭಾಗದ ಜೀವನದಿ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ನದಿ ನೀರಿನ ಪ್ರಮಾಣ 11 ಮೀಟರ್ ಎತ್ತರಕ್ಕೆ ತಲುಪಿದರೆ ಅದು ಎಚ್ಚರಿಕೆಯ ಮಟ್ಟ, 12 ಮೀಟರ್ ತಲುಪಿದರೆ ಅದು ಅಪಾಯದ ಮಟ್ಟ ಎಂದು ಗುರುತಿಸಲಾಗಿದೆ.

ಗುರುವಾರಕ್ಕೆ ನದಿ ನೀರಿನ ಮಟ್ಟ 10 ಮೀಟರ್ ಸಮೀಪದಲ್ಲಿದೆ. ಮಲೆನಾಡಿನಲ್ಲಿ ಮಳೆ ಇದೇ ರೀತಿಯಲ್ಲಿ ಮುಂದುವರಿದರೆ ಇನ್ನೊಂದೆರಡು ದಿನಗಳಲ್ಲಿ ಅಪಾಯದ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಿದರು ಕೂಡ ನದಿ ನೀರಿನ ಮಟ್ಟ ಅಪಾಯದ ಮಟ್ಟವನ್ನು ತಲುಪಲಿದೆ. ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹೊನ್ನಾಳಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಎಚ್.ಜೆ. ರಶ್ಮಿ ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಪಿಎಸ್‌ಐ ನೇಮಕಾತಿ ಅಕ್ರಮ: ವಿಚಾರಣೆಗೆ ಅಮ್ರಿತ್‌ ಪೌಲ್‌ ಅಸಹಕಾರ
ಮುಂದಿನ ಲೇಖನಶನಿವಾರದಿಂದ ಮದ್ಯ ಮಾರಾಟ ಬಂದ್‌ ! ಎಣ್ಣೆ ಪ್ರಿಯರಿಗೆ ಶಾಕ್‌