ಮನೆ Uncategorized ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ: ಹಲವೆಡೆ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ: ಹಲವೆಡೆ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

0

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಅಬ್ಬರ ಶುರುವಾಗಿದ್ದು, ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿರುವ ಕಾರಣ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಸೇರಿರುವ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧರಣಾ ಪ್ರಮಾಣದ ಮಳೆಯಾಗಲಿದೆ. ಕೆಲ ಪ್ರದೇಶಗಳಲ್ಲಿ ಮಾತ್ರ ಭಾರಿ ವರ್ಷಧಾರೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು ಜಿಲ್ಲೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ.

ಈ ಸಂಬಂಧ ಜಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಜಾಗರ, ಖಾಂಡ್ಯ, ಅಲ್ದೂರು, ವಸ್ತಾರೆ ಹೋಬಳಿಯ ಶಾಲೆಗಳಿಗೆ ರಜೆ ನೀಡಲಾಗಿದೆ.

ಇಂದು ಈ ಐದು ತಾಲ್ಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ರಜೆ ಅವಧಿಯ ತರಗತಿಗಳನ್ನು ಮುಂದಿನ ಶಾಲಾ ಅವಧಿಯಲ್ಲಿ ಸರಿದೂಗಿಸುವಂತೆ ಸೂಚಿಸಿದ್ದಾರೆ.

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಂದು ಎರಡು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ, ಜೋಯಿಡಾ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ನೀಡಿ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.