ಮನೆ ಕಾನೂನು ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ  ಮಹತ್ವದ ತೀರ್ಪನ್ನು ಪ್ರಕಟಿಸಿದೆ.

Join Our Whatsapp Group

ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ, ರಾಜ್ಯಪಾಲರ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ಅತಂತ್ರವಾದಂತಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾ|ಎಂ.ನಾಗಪ್ರಸನ್ನ ಅವರಿರುವ ಏಕಸದಸ್ಯ ನ್ಯಾಯಪೀಠವು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್‌ ಮನು ಸಿಂಘ್ವಿ ಭಾಗಿ.

ಮುಖ್ಯಮಂತ್ರಿಗಳ ಅರ್ಜಿ ಕುರಿತು ಘಟಾನುಘಟಿ ಹಿರಿಯ ವಕೀಲರು ಸುದೀರ್ಘ ವಾದ-ಪ್ರತಿವಾದ ಆಲಿಸಿ ಏಕಸದಸ್ಯ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತ್ತು. ಮುಖ್ಯಮಂತ್ರಿಗಳ ಅರ್ಜಿ ವಜಾಗೊಂಡರೆ ಅಥವಾ ಪುರಸ್ಕಾರವಾದರೆ ಮುಂದೇನಾಗಬಹುದು ಎಂಬ ಚರ್ಚೆ ಭರ್ಜರಿಯಾಗಿ ನಡೆಯುತ್ತಿರುವ ನಡುವೆ ಈ ಬೆಳವಣಿಗೆ ನಡೆದಿದ್ದು, ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾದಂತಾಗಿದೆ.

ತೀರ್ಪಿನಲ್ಲೇನಿದೆ?

ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ದೂರುದಾರರು ಅನುಮತಿ ಕೋರಬಹುದು. ಸಂವಿಧಾನದ ಕಲಂ 17 ಎ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ ಕ್ರಮ ಸೂಕ್ತವಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿ 17ಎ ಅಡಿ ಆದೇಶ ನೀಡಿರುವುದು ಕಾನೂನುಬದ್ಧವಾಗಿದೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿ ರಾಜ್ಯಪಾಲರಾದ ಗೆಹ್ಲೋಟ್‌ ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದರು.