ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಗೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ. 5ರಂದು ನಡೆಯಲಿದೆ.
ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸೆ. 27ರಂದು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಅರ್ಜಿ ಸ್ವೀಕೃತವಾಗಿದ್ದು, ಹೈಕೋರ್ಟ್ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದೆ. ಅಂದು ದೂರುದಾರರ ಪರ ವಕೀಲರು ವಿಚಾರ ಮಂಡಿಸಲಿದ್ದಾರೆ.
ಮುಡಾ ಪ್ರಕರಣ ಈವರೆಗೆ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಹಾಗೂ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಯುತ್ತಿದೆ.
ಈ ನಡುವೆ ಸಿಬಿಐಗೆ ಒಪ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿರುವುದು ಮತ್ತಷ್ಟು ಕುತೂಹಲಕ್ಕೆ ಎಡೆಮಾಡಿದೆ. ನನಗೆ ಮೊದಲಿನಿಂದಲೂ ಲೋಕಾಯುಕ್ತದ ಮೇಲೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ನಾನು ಅರ್ಜಿ ಸಲ್ಲಿಸಿರುವೆ. ನ್ಯಾಯಾಲಯದಲ್ಲಿ ನಾಳೆ ಪ್ರಕರಣ ಬರಲಿದೆ. ವಾರದೊಳಗೆ ಸಿಬಿಐಗೆ ವಹಿಸಬಹುದು ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಎಲ್ಲ ಹಗರಣಗಳ ತನಿಖೆ ಸಿಬಿಐಗೆ ವಹಿಸಿ: ಹೈಕೋರ್ಟ್ ಗೆ ಅರ್ಜಿ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ, ವಾಲ್ಮೀಕಿ ನಿಗಮ ಹಗರಣ, ಪಿಎಸ್ ಐ ನೇಮಕಾತಿ ಹಗರಣ, 40 ಪರ್ಸೆಂಟ್ ಕಮಿಷನ್ ಹಗರಣ ಸೇರಿದಂತೆ ಹಾಲಿ ಕಾಂಗ್ರೆಸ್ ಹಾಗೂ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಮೈಸೂರಿನ ವಕೀಲ ಸಿ. ಸಂತೋಷ್ ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ, ಕೇವಲ ಪತ್ರಿಕಾ ವರದಿಗಳನ್ನು ಆಧರಿಸಿ ಅರ್ಜಿ ಸಲ್ಲಿಸಲಾಗಿದೆ.
ನಿಮ್ಮ ಮನವಿಯನ್ನು ಪುರಸ್ಕರಿಸುವಂತಹ ಯಾವುದೇ ದಾಖಲೆ ಇಲ್ಲ, ಹಾಗಾಗಿ ಈ ಅರ್ಜಿ ವಜಾಗೊಳಿಸಬೇಕಾಗುತ್ತದೆ ಎಂದು ಮೊದಲು ಹೇಳಿತು. ಆದರೆ ಬಳಿಕ ಸೂಕ್ತ ದಾಖಲೆಗಳು ಹಾಗೂ ವಾದಾಂಶಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 2 ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿತು.