ಉದಯಪುರ (Udaipur): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದ ವ್ಯಕ್ತಿಯ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದು ಉದಯಪುರ ಎಸ್‌ಪಿ ಮನೋಜ್ ಕುಮಾರ್ ತಿಳಿಸಿದ್ದಾರೆ.
ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು. ಕೃತ್ಯದ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ ದುಷ್ಕರ್ಮಿಗಳು ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಇದೀಗ ವಿಡಿಯೋದಲ್ಲಿ ಕಂಡುಬಂದಿರುವ ವ್ಯಕ್ತಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ಫ್ಯೂ ವಿಸ್ತರಣೆ:
ಉದಯಪುರ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ ಮಂಗಳವಾರ ಸಂಜೆಯೇ ಆದೇಶ ಹೊರಡಿಸಲಾತ್ತು. ಜತೆಗೆ, ಇಂಟರ್‌ನೆಟ್ ಸೇವೆಯನ್ನೂ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲೆಯ 7 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದೆ.
ಧಾನ್ ಮಂಡಿ, ಘಂಟಾ ಘರ್, ಹಾಥಿ ಪೋಲ್, ಅಂಬ ಮಟ, ಸೂರಜ್ ಪೋಲ್, ಭೂಪಾಲ್‌ಪುರ ಹಾಗೂ ಸವಿನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಮುಂದಿನ ಆದೇಶದವರೆಗೆ ಕರ್ಫ್ಯೂ ಹೇರಲಾಗಿದೆ ಎಂದು ಉದಯಪುರ ಜಿಲ್ಲಾಧಿಕಾರಿ ತಾರಾಚಂದ್ ಮೀನಾ ಆದೇಶದಲ್ಲಿ ತಿಳಿಸಿದ್ದಾರೆ.