ಚಿತ್ರದುರ್ಗ (Chitradurga): ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆ.5 ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಗುರುವಾರ ರಾತ್ರಿ ಬಂಧಿತರಾಗಿರುವ ಶರಣರು ಅನಾರೋಗ್ಯದ ಕಾರಣಕ್ಕೆ ಶುಕ್ರವಾರ ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಹೃದ್ರೋಗ ಸಮಸ್ಯೆ ಇರುವುದು ಖಚಿತವಾದ ಬಳಿಕ ದಾವಣಗೆರೆಯ ತಜ್ಞ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಧಾವಿಸಿ ಹೃದಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇದೆ ಎಂಬ ಬಗ್ಗೆ ವರದಿ ನೀಡಿದ್ದರು.
ಅಸ್ವಸ್ಥತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಸೂಚಿಸಿದರು.
ಅದರಂತೆ ಶ್ರೀಗಳನ್ನು ಸಂಜೆ ವೇಳೆಗೆ ಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಶ್ರೀಗಳನ್ನು ವಿಚಾರಣೆಗಾಗಿ ಐದು ದಿನ ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.