ಮೈಸೂರು(Mysuru): ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕನ್ನಯ್ಯ ಲಾಲ್ ಹತ್ಯೆ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಘೋಷಣೆ ಕೂಗಿದರು.
ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆ ಕೆ.ಆರ್.ವೃತ್ತ, ಅರಸು ರಸ್ತೆ ಮೂಲಕವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಶಾಸಕ ಎಲ್.ನಾಗೇಂದ್ರ ಸಾಥ್ ನೀಡಿದರು.
ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು ರಾಜಸ್ಥಾನ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಅಂಗಡಿ ಮುಗ್ಗಟ್ಟುಗಳನ್ನ ಬಂದ್ ಮಾಡಿ ವರ್ತಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರಾಜಸ್ಥಾನ ಮೂಲದ ವರ್ತಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.