ಮೈಸೂರು: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ-2024 ರ ಅಂಗವಾಗಿ ಜೂನ್ 01 ರಿಂದ 30 ರವರೆಗೆ ಜಿಲ್ಲೆಯಾದ್ಯಂತ ಜಿಲ್ಲಾ ಕಾರ್ಯಪಡೆ ಹಾಗೂ ಅಧಿಕಾರಿಗಳನ್ನೊಳಗೊಂಡoತೆ ಒಂದು ತಿಂಗಳ ಬಾಲ/ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನ (Pan India child labour rescue and rehabilitation campaign) ಹಮ್ಮಿಕೊಂಡಿದ್ದು, ಅದರಂತೆ ಮೈಸೂರು ನಗರ ಪ್ರದೇಶದಲ್ಲಿ ಜೂನ್ 24 ಮತ್ತು 25 ರಂದು ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನವನ್ನು ನಡೆಸಿ, ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ 09 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಿ ಕೆಲಸದಿಂದ ಬಿಡುಗಡೆಗೊಳಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಸದರಿ ಕಿಶೋರ ಕಾರ್ಮಿಕ ಮಕ್ಕಳನ್ನು ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಯಿತು.
ಅಭಿಯಾನದಲ್ಲಿ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಿಬ್ಬಂದಿಗಳು ಹಾಜರಿದ್ದರು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.