ಮನೆ ರಾಜ್ಯ ಮೈಸೂರು ಅನಂತಸ್ವಾಮಿ ದಾಟಿಯಲ್ಲಿ ನಾಡಗೀತೆ ಹಾಡಲು ರಾಜ್ಯ ಸರ್ಕಾರ ಸಮ್ಮತಿ

ಮೈಸೂರು ಅನಂತಸ್ವಾಮಿ ದಾಟಿಯಲ್ಲಿ ನಾಡಗೀತೆ ಹಾಡಲು ರಾಜ್ಯ ಸರ್ಕಾರ ಸಮ್ಮತಿ

0

ಬೆಂಗಳೂರು(Bengaluru): ಖ್ಯಾತ ರಾಗ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ “ಜಯಭಾರತ ಜನನಿಯ ತನುಜಾತೆ” ನಾಡಗೀತೆಯನ್ನು ಸಂಪೂರ್ಣ ಹಾಡಲು  ರಾಜ್ಯ ಸರಕಾರ ಸಮ್ಮತಿ ಸೂಚಿಸಿದೆ.

ಯಾವುದೇ ಆಲಾಪ ಹಾಗೂ ಪುನರಾವರ್ತನೆ ಇಲ್ಲದಂತೆ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆಯನ್ನು ಹಾಡಲು ಸಾಧ್ಯ ಎಂದು ತಜ್ಞರು ನೀಡಿದ ವರದಿ ಆಧರಿಸಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಏನಿದು ವಿವಾದ ? : ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ 2005 ರಿಂದಲೂ ನನೆಗುದಿಗೆ ಬಿದ್ದಿತ್ತು ‌. ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದ ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ಅಂಗವಿಕಲರಿಗೆ ಅನನುಕೂಲವಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರಕಾರದ ಮುಂದೆ ಇತ್ತು. 2006 ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ.

ಈ ಹಿನ್ನೆಲೆಯಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿ ಸುನಿಲ್‌ ಕುಮಾರ್ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡಬೇಕೆಂದು ನೀಡಿದ್ದ ಶಿಫಾರಸು ಇದೀಗ ಅಧಿಕೃತಗೊಂಡಿದೆ.