ಮನೆ ಕಾನೂನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್‌ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್‌ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

0

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ಗುರುವಾರ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

ತಮ್ಮ ನೇಮಕಾತಿ ರದ್ದುಪಡಿಸಿರುವ ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಪ್ರೊ.ಎನ್‌ ಕೆ ಲೋಕನಾಥ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಲೋಕನಾಥ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರು “ಕುಲಪತಿ ಹುದ್ದೆಗೆ ಲೋಕನಾಥ್‌ ಅರ್ಹರಿದ್ದಾರೆ ನಿಜ. ಆದರೆ, ನೇಮಕಾತಿ ಪ್ರಕ್ರಿಯೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯಿದೆ–2000 ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳನ್ನು ಅನುಸರಿಸಿಲ್ಲ ಎಂಬುದಷ್ಟೇ ಏಕಸದಸ್ಯ ಪೀಠದ ಆಕ್ಷೇಪ” ಎಂದರು.

 “ದಶಕದ ಹಿಂದಿನ ನಿವೇಶನಕ್ಕೆ ಸಂಬಂಧಿಸಿದ ತಗಾದೆಯೊಂದರಲ್ಲಿ ಲೋಕನಾಥ್‌ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ನ್ಯಾಯಾಲಯ ಈಗಾಗಲೇ ರದ್ದುಪಡಿಸಿದೆ. ಅರ್ಜಿದಾರರ ವಿರುದ್ಧ ದುರುದ್ದೇಶಪೂರ್ವಕ ಆರೋಪಗಳನ್ನು ಮಾಡಲಾಗಿದೆ. ಅಂತೆಯೇ, ನೇಮಕಾತಿ ಪ್ರಕ್ರಿಯೆ ಸರಿಯಿಲ್ಲ ಎಂಬ ಏಕೈಕ ಆಕ್ಷೇಪವನ್ನೇ ನೆಪವಾಗಿರಿಸಿಕೊಂಡ ಏಕಸದಸ್ಯ ಪೀಠ ನೇಮಕಾತಿಯನ್ನೇ ರದ್ದುಪಡಿಸಿರುವುದು ಅರ್ಜಿದಾರರಿಗೆ ಉಂಟು ಮಾಡಿರುವ ಅನ್ಯಾಯ. ಆದ್ದರಿಂದ, ಈ ಆದೇಶವನ್ನು ರದ್ದುಪಡಿಸಬೇಕು” ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ವಿಭಾಗೀಯ ಪೀಠವು, ಅರ್ಜಿದಾರರು ಆಡಳಿತಾತ್ಮಕವಾಗಿ ಯಾವುದೇ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವಂತಿಲ್ಲ ಎಂದು ಆದೇಶಿಸಿತಲ್ಲದೇ, ಮೇಲ್ಮನವಿಯ ಪ್ರತಿವಾದಿಗಳಾದ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಮೈಸೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಮೈಸೂರು ವಿಶ್ವವಿದ್ಯಾಲಯದ ಉ‍‍‍‍ಪಕುಲಪತಿಯ ಶೋಧನಾ ಸಮಿತಿ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ನಿರ್ದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಕ ಮಾಡಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಮತ್ತು ಡಾ.ಜಿ ವೆಂಕಟೇಶ್‌ ಕುಮಾರ್‌ ಹೈಕೋರ್ಟ್‌ನಲ್ಲಿ ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಿದ್ದರು. ಇವುಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎನ್‌ ಎಸ್‌ ಸಂಜಯಗೌಡ ಅವರ ನೇತೃತ್ವದ ಏಕಸದಸ್ಯ ಪೀಠವು ನೇಮಕಾತಿ ರದ್ದುಗೊಳಿಸಿ ಇದೇ 12ರಂದು ಆದೇಶಿಸಿತ್ತು.