ಬೆಂಗಳೂರು (Bengaluru)- ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಮಲಾನಂದನಾಥ ಶ್ರೀಗಳ ಆಗ್ರಹವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಕ್ಷಣ ಸಚಿವರ ಜತೆ ಚರ್ಚಿಸಿದ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಷ್ಟ್ರ ಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆ ತಿರುಚಿ ಬರೆದಿರುವವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದ್ದರು.
ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎನ್ನುವ ಸಂದೇಶ ರವಾನಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದರು.
ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ಮೇಲೆ ರಾಷ್ಟ್ರ ಕವಿ ಕುವೆಂಪು ಹಾಗೂ ನಾಡಗೀತೆಗೆ ಅವಮಾನ ಮಾಡಿದ ಆರೋಪವಿದೆ.
ರಾಜ್ಯಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.