ಚಿಕ್ಕಮಗಳೂರು: ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ ರವಿ, ಚುನಾವಣೆಯಲ್ಲಿ ಕಾಂಗ್ರೆಸ್ ರಾಜಕಾರಣ ಮಾಡಿತು. ಅಮುಲ್ ವಿಷಯ ಇಟ್ಟುಕೊಂಡು ರಾಜಕೀಯ ಮಾಡಿತು. ಈಗ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಹಳೇ ದರದಲ್ಲಿ ತಿರುಪತಿಗೆ ನಂದಿನಿ ತುಪ್ಪ ಕೊಡುತ್ತಿಲ್ಲ. ಕಾಂಗ್ರೆಸ್ ಅಜೆಂಡಾಗೆ ಈ ಪ್ರಕರಣವೇ ಸಾಕ್ಷಿ. ಅಸಮರ್ಥ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕಕ್ಕೆ ಹಾನಿ ಎಂದು ಕಿಡಿಕಾರಿದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಎಂಎಫ್ ಮಾಜಿ ಅಧ್ಯಕ್ಷ ಸೋಮಶೇಖರ ರೆಡ್ಡಿ, ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ನಂದಿನಿ ತುಪ್ಪ ಕಳಿಸಬೇಕು. ತಿರುಪತಿಗೆ ಹಾಗೂ ನಂದಿನಿ ತುಪ್ಪಕ್ಕೆ ಅವಿನಾಭಾವ ಸಂಬಂಧವಿದೆ. ತಿರುಪತಿಗೆ ನಂದಿನಿ ತುಪ್ಪ ಕೊಡುವುದನ್ನು ನಿಲ್ಲಿಸಿದರೆ ರೈತರಿಗೆ ತೊಂದರೆಯಾಗಲಿದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.