ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ.
2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಿಸಿದರು.
ರಾಜ್ಯ ಬಜೆಟ್ 2024: ಶಿಕ್ಷಣ ಕ್ಷೇತ್ರ
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು.
1) ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
2) 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
3) ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
4) ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್‌ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.
5) 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು.
ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ‘ನಾವು ಮನುಜರು’ ಎಂబ ಹೆಸರಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು.
ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 NEET/JEE/CET ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಸರ್ಕಾರ ನಿರ್ಧರಿಸಲಾಗಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.
ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.