ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನಿಗದಿತ ಅವಧಿಯೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ, ಪ್ರತಿ ತಿಂಗಳು ನೀಡಲಾಗುವ 2,000 ರೂಪಾಯಿ ಸಹಾಯಧನದ ಜಮಾವಣೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಫಲಾನುಭವಿಗಳು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರಗಳು ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೃಢೀಕರಣ ಪ್ರಕ್ರಿಯೆ ವೇಳೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಯೋಜನೆಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡಲು ಹಾಗೂ ದಾಖಲೆಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
















