ತುಮಕೂರು: ಹೊಸ ವರ್ಷಾಚರಣೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಡಿ31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ದೇವರಾಯನದುರ್ಗ, ನಾಮದ ಚಿಲುಮೆ ಮತ್ತು ಬಸದಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡುವ ಸಾಧ್ಯತೆ ಇರುತ್ತದೆ.
ಬೆಟ್ಟದ ರಸ್ತೆಗಳಲ್ಲಿ ತಿರುವುಗಳು ಹೆಚ್ಚಾಗಿದ್ದು, ಅಪಘಾತಗಳು ನಡೆಯುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.














