ಮನೆ ರಾಜ್ಯ SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ – ಹೈಕೋರ್ಟ್

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ – ಹೈಕೋರ್ಟ್

0

ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಗ್ರೇಡ್ ನೀಡುವ ಬಗ್ಗೆ ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿ ಮೂವರು ವಿದ್ಯಾರ್ಥಿಗಳು ತಕರಾರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರ ಏಕಸದಸ್ಯ ಪೀಠವು ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿ, ಅರ್ಜಿ ಇತ್ಯರ್ಥಪಡಿಸಿದೆ.

ಅರ್ಜಿದಾರರ ಪರ ವಕೀಲ ಆರ್.ವಿ.ನಾಯ್ಕ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು 2026ರ ಮಾ.28ರಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ಇದಕ್ಕೂ ಮುನ್ನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮುಖ್ಯಸ್ಥರು 2024ರ ಅ.18 ಮತ್ತು 2025ರ ಅ.28ರಂದು ಮಾರ್ಗಸೂಚಿ ಹಾಗೂ ಸುತ್ತೋಲೆ ಹೊರಡಿಸಿದೆ.

ಎಸ್‌ಎಸ್‌ಎಲ್‌ಸಿ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕ ನೀಡಬೇಕು. ಲಿಖಿತ ಪರೀಕ್ಷೆಯ ಮೌಲ್ಯಮಾಪನದಲ್ಲಿ 80 ಅಂಕ, ಶಾಲಾ ಆಂತರಿಕ ಪರೀಕ್ಷೆ 20 ಅಂಕ ನೀಡಬೇಕು ಎಂದು ಸೂಚಿಸಿದ್ದಾರೆ. ಆದರೆ, ಕೊನೆ ಹಂತದಲ್ಲಿ ಪರೀಕ್ಷೆ ನಡೆಯುತ್ತಿರುವ ಸಮಯದಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಆಕ್ಷೇಪಿಸಿದರು.

ಯುಪಿಎಸ್‌ಸಿ ಸೇರಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸ್ವಾಮ್ಯದ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಗ್ರೇಡಿಂಗ್‌ನ್ನು ಪರಿಗಣಿಸುವುದಿಲ್ಲ. ಕೇವಲ ಅಂಕಗಳನ್ನಷ್ಟೆ ಪರಿಗಣಿಸಲಾಗುತ್ತದೆ. ರಾಜ್ಯ ಸರ್ಕಾರ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡಿದರೆ, ರಾಜ್ಯದ ವಿದ್ಯಾರ್ಥಿಗಳು/ಉದ್ಯೋಗ ಆಕಾಂಕ್ಷಿಗಳ ಮೇಲೆ ಭವಿಷ್ಯದಲ್ಲಿ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ.

ಆದ್ದರಿಂದ 2025-2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಸರ್ಕಾರ ಹಾಗೂ ಕೆಎಸ್‌ಇಎಬಿಗೆ ನಿರ್ದೇಶಿಸಬೇಕು ಎಂದು ಕೋರಿದರು. ನ್ಯಾಯಪೀಠ ಪ್ರತಿಕ್ರಿಯಿಸಿ, ತೃತೀಯ ಭಾಷೆ ವಿಷಯಗಳ ಪರೀಕ್ಷೆಯಲ್ಲಿ ಗ್ರೇಡಿಂಗ್ ನೀಡುವ ಬಗ್ಗೆ ರಾಜ್ಯ ಸರ್ಕಾರ ನೋಟಿಫಿಕೇಷನ್/ಸುತ್ತೋಲೆ ಹೊರಡಿಸಿದೆಯೇ ಎಂದು ಸರ್ಕಾರಿ ವಕೀಲರನ್ನು ಕೋರಿದರು.

ಸರ್ಕಾರಿ ವಕೀಲರು, ಸದ್ಯ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸರ್ಕಾರದಿಂದ ಪಡೆದು ತಿಳಿಸಲಾಗುವುದು ಎಂದು ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಹಾಲಿ ಇರುವ ನಿಯಮಗಳು ಹಾಗೂ ಮಾರ್ಗಸೂಚಿಯಂತೆ 2025-2026ನೇ ಸಾಲಿನಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.