ಬೆಂಗಳೂರು(Bengaluru): ಕೋವಿಡ್ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೋವಿಡ್ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಹೇಳಿದರು.
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು. ಹಾಗೆಯೇ ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ ಎಂದರು.
ಇಲಾಖೆಯು ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದು ಸಹ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಿರಬಹುದು. ಆದರೆ ರೋಗ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲು ಆಗುವ ಪ್ರಕರಣಗಳು ತೀರಾ ಕಡಿಮೆ. ಇದನ್ನು ನಾಲ್ಕನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿಸಿಲ್ಲ ಎಂದರು.
ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಜಿನೋಮಿಕ್ ಸಿಕ್ವೆನ್ಸಿಂಗ್ ಲ್ಯಾಬ್ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು.
ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಂಗಳವಾರ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್ ಅವರ ಜತೆ ಪರಿಶೀಲನೆ ನಡೆಸುವುದಾಗಿಯೂ ಸಚಿವ ಸುಧಾಕರ್ ತಿಳಿಸಿದರು.














