ಮೈಸೂರು: ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಯಾರೊಬ್ಬರು ಸಹ ಮತದಾನದಿಂದ ದೂರ ಉಳಿಯದೆ ಎಲ್ಲರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ತಿಳಿಸಿದರು.
ಹೆಚ್.ಡಿ.ಕೋಟೆ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆ ಶನಿವಾರ ಅಂಕನಾಥಪುರ ಗ್ರಾಮದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಕಳೆದ ಬಾರಿ ಚುನಾವಣೆಗಿಂತಲೂ ಈ ಬಾರಿ ಹೆಚ್ಚು ಮತದಾನ ನಡೆಯಬೇಕು ಹಾಗಾಗಿ ಪ್ರತಿಯೊಬ್ಬ ಮತದಾರನು ತಮ್ಮ ಸಾಂವಿಧಾನಿಕ ಮತದಾನ ಹಕ್ಕನ್ನು ಚಲಾಯಿಸಬೇಕು. ಜೊತೆಗೆ ತಮ್ಮ ನೆರೆಹೊರೆಯವರನ್ನು ಸಹ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.
ಜಾಗೃತ ಮತದಾರ ಪ್ರಜಾಪ್ರಭುತ್ವದ ನೇತಾರ ಆದ್ದರಿಂದ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸ್ವ-ಇಚ್ಛೆಯಿಂದ ನಿರ್ಬೀತರಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಹೇಳಿದರು.
ಇದೇ ವೇಳೆ ಅಂಕನಾಥಪುರ ಶಾಲಾ ಆವರಣದಲ್ಲಿ ಸಾರ್ವಜನಿಕರಿಂದ ಮಾನವ ಸರಪಳಿ ನಿರ್ಮಿಸಿ ಮತದಾನ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಇದೇ ಏಪ್ರಿಲ್ 26 ರಂದು ನಡೆಯುವ ಮತದಾನ ದಿನದಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು. ಕೆಲಸಕ್ಕಾಗಿ ದೂರದ ಊರುಗಳಿಗೆ ತೆರಳಿರುವ ಪೋಷಕರಿಗೆ ಮತದಾನದಲ್ಲಿ ಭಾಗವಹಿಸುವಂತೆ ಶಾಲಾ ಮಕ್ಕಳಿಂದ ಅಂಚೆ ಪತ್ರ ಮೂಲಕ ಸಂದೇಶ ಬರೆದು ಕಳುಹಿಸಲಾಯಿತು.
ಈ ವೇಳೆ ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಾದ ಕೆ.ಎಂ ರಘುನಾಥ್, ತಾಲ್ಲೂಕು ಯೋಜನಾಧಿಕಾರಿಗಳಾದ ಕೆ.ರಂಗಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯರಾಜ್, ಎನ್.ಆರ್.ಎಲ್.ಎಂ ಸಿಬ್ಬಂದಿಗಳಾದ ಶ್ರೀಕಾಂತ್, ರಾಜಶೇಖರ, ತಾಲ್ಲೂಕು ಐಇಸಿ ಸಂಯೋಜಕ ನಿಂಗರಾಜು, ಗ್ರಾ.ಪಂ ಸಿಬ್ಬಂದಿಗಳು ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಂ ಹಾಜರಿದ್ದರು.