ಮನೆ ಕಾನೂನು ಓಲಾ, ಉಬರ್ ಆಟೋ ಸೇವೆ: ಶೇ. 5 ಸೇವಾ ಶುಲ್ಕ, ಜಿಎಸ್’ಟಿ ಸೇರಿಸಿ ಪ್ರಯಾಣ ದರ...

ಓಲಾ, ಉಬರ್ ಆಟೋ ಸೇವೆ: ಶೇ. 5 ಸೇವಾ ಶುಲ್ಕ, ಜಿಎಸ್’ಟಿ ಸೇರಿಸಿ ಪ್ರಯಾಣ ದರ ನಿಗದಿ: ಹೈಕೋರ್ಟ್’ಗೆ ಸರ್ಕಾರದ ವಿವರಣೆ

0

ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ 5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್’ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್’ಗೆ ಸೋಮವಾರ ತಿಳಿಸಿದೆ.

ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿ, ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ರೊಪ್ಪೆನ್ ಟ್ರಾನ್ಸ್’ಪೋರ್ಟೇಶನ್ ಸರ್ವೀಸಸ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್ ಜಿ ಪಂಡಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲರು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.

ಈ ಹಿಂದಿನ ವಿಚಾರಣೆ ವೇಳೆ ಪೀಠವು ಅರ್ಜಿದಾರ ಕಂಪೆನಿಗಳು ಆಟೋರಿಕ್ಷಾ ಸೇವೆಗೆ ದರ ನಿಗದಿಪಡಿಸಿ ಸರ್ಕಾರ 2021ರ ನವೆಂಬರ್ 6ರಂದು ಹೊರಡಿಸಿರುವ ಆದೇಶದಲ್ಲಿ ಸೂಚಿಸಿರುವ ದರದ ಜೊತೆಗೆ ಶೇ.10ರಷ್ಟು ಹೆಚ್ಚುವರಿ ಹಣ ಮತ್ತು ಸೇವಾ ತೆರಿಗೆಯನ್ನು ಪಡೆಯಬೇಕು. ದರ ನಿಗದಿಪಡಿಸುವವರೆಗೆ ಅಗ್ರಿಗೇಟರ್ ಕಂಪೆನಿಗಳ ವಿರುದ್ಧ ಸರ್ಕಾರ ಬಲವಂತದ ಕ್ರಮ ಜರುಗಿಸಬಾರದು. ಆಟೋರಿಕ್ಷಾ ಸೇವೆ ಒದಗಿಸಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿದರೆ, ಅದನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ನಿರ್ದೇಶಿಸಿತ್ತು. ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ಮುಂದಿನ ವಿಚಾರಣೆವರೆಗೂ ವಿಸ್ತರಣೆಯಾಗಲಿದೆ.

ಹಿಂದಿನ ಲೇಖನವಿವಿಧ ರಾಜ್ಯಗಳಲ್ಲಿ ಎನ್’ಐಎ ದಾಳಿ
ಮುಂದಿನ ಲೇಖನಬೈಕ್-ಕ್ಯಾಂಟರ್ ನಡುವೆ ಅಪಘಾತ: ಇಬ್ಬರು ಸಾವು