ನವದೆಹಲಿ : ಸರಿಯಾಗಿ ಇವತ್ತಿಗೆ ಒಂದು ವರ್ಷದ ಹಿಂದೆ ಪಹಲ್ಗಾಮ್ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಬೀಭತ್ಸ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೃತರ ನೆನೆದು ಕಂಬನಿ ಮಿಡಿದಿದ್ದಾರೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಮಂದಿಗೆ ಸಂತಾಪ ಸೂಚಿಸಿದ್ದಾರೆ.
ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಮುಗ್ಧ ಜೀವಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ನಷ್ಟವನ್ನ ನಿಭಾಯಿಸುತ್ತಿರುವ ದುಃಖಿತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಸಹ ಇವೆ. ಒಂದು ರಾಷ್ಟ್ರವಾಗಿ, ನಾವು ದುಃಖ ಮತ್ತು ದೃಢಸಂಕಲ್ಪದಲ್ಲಿ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಭಾವುಕರಾಗಿದ್ದಾರೆ. ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ. ಭಯೋತ್ಪಾದಕರ ಹೇಯ ಯೋಜನೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಗುಡುಗಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಎಂಬ ಸುಂದರ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಸಂಭ್ರಮದಲ್ಲಿದ್ದರು. ಪ್ರವಾಸಿಗರು ತೆರೆದ ಕಣಿವೆಯಲ್ಲಿ ಆನಂದಿಸುತ್ತಿದ್ದಾಗ ಇದ್ದಕ್ಕಿದ್ದಂತೆ, ಶಸ್ತ್ರಸಜ್ಜಿತ ವ್ಯಕ್ತಿಗಳು ಆ ಪ್ರದೇಶಕ್ಕೆ ಪ್ರವೇಶಿಸಿ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು. ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಲು ಪ್ರಾರಂಭಿಸಿದರು.
ಈ ವೇಳೆ ಪ್ರವಾಸಿಗರ ಮೇಲೆ ಏಕಾಏಕಿ ದಾಳಿ ನಡೆಸಿದ ಉಗ್ರರು, ಹಿಂದೂಗಳನ್ನು ಹುಡುಕಿ ಕೊಂದರು. ಭಯೋತ್ಪಾದಕರ ದಾಳಿಗೆ 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡರು. ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಹಲವರು ಗಾಯಗೊಂಡರು. ಕಣ್ಣೆದುರೇ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿತು. ಹೆಣ್ಣೊಬ್ಬಳು ತನ್ನ ಪತಿಯ ಮೃತದೇಹದ ಮುಂದೆ ಕುಳಿತು ಅಳುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಭಯೋತ್ಪಾದಕ ದಾಳಿಯ ಹೊಣೆಯನ್ನು ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಹೊತ್ತುಕೊಂಡಿದೆ. ಇದು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದೆ. ಆದರೆ, ಪಾಕಿಸ್ತಾನ ಮಾತ್ರ ಈ ದಾಳಿಯಲ್ಲಿ ತನ್ನದೇನೂ ಪಾತ್ರವಿಲ್ಲ ಅಂತ ನಾಟಕವಾಡಿತು. ಪಾಕ್ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಾಜಿದ್ ಜಾಟ್ ಸೇರಿದಂತೆ ಏಳು ಆರೋಪಿಗಳನ್ನು ದೋಷಾರೋಪ ಪಟ್ಟಿಯಲ್ಲಿ ಹೆಸರಿಸಲಾಯಿತು. ದಾಳಿಯ ಹಿಂದಿನ ಪಾಕ್ ಪಿತೂರಿಯನ್ನು ಸಹ ಎನ್ಐಎ ಬಹಿರಂಗಪಡಿಸಿತು.















