ಇಸ್ಲಾಮಾಬಾದ್: ಅಧಿಕೃತ ರಹಸ್ಯ ಕಾಯ್ದೆ ಉಲ್ಲಂಘನೆ ಆರೋಪದಡಿ ಜೈಲು ಸೇರಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 25ರಂದು ನಡೆಸುವುದಾಗಿ ಇಸ್ಲಾಮಾಬಾದ್ ಹೈಕೋರ್ಟ್ ಶನಿವಾರ ಹೇಳಿದೆ.
ಜಾಮೀನು ಅರ್ಜಿಯನ್ನು ತಿರಸ್ಕರಿಸಿ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದೇ ಕಾಯ್ದೆ ಉಲ್ಲಂಘನೆ ಆರೋಪದಡಿ ಬಂದಿತರಾಗಿರುವ ಮಾಜಿ ವಿದೇಶಾಂಗ ಸಚಿವ ಮಹಮೂದ್ ಖುರೇಶಿ ಅವರ ಜಾಮೀನು ಅರ್ಜಿಯನ್ನು ಕೂಡ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಇಬ್ಬರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 26ರವರೆಗೆ ವಿಸ್ತರಿಸಿ ಸೆಪ್ಟೆಂಬರ್ 13ರಂದು ಆದೇಶಿಸಿತ್ತು.
ಅಮೆರಿಕಾದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಕಳೆದ ವರ್ಷ ಮಾರ್ಚ್ ನಲ್ಲಿ ರವಾನಿಸಿದ್ದ ಅಧಿಕೃತ ದಾಖಲೆಗಳನ್ನು ಸೋರಿಕೆ ಮಾಡಿದ್ದ ಆರೋಪವನ್ನು ಇಮ್ರಾನ್ ಖಾನ್ ಹಾಗೂ ಖುರೇಶಿ ಎದುರಿಸುತ್ತಿದ್ದಾರೆ.














