ಹುಬ್ಬಳ್ಳಿ: ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷ ದ್ರೋಹಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದರು.
ಹುಬ್ಬಳ್ಳಿ ನಗರದ ಕ್ಯೂಬಿಕ್ಸ್ ಹೋಟೆಲ್‌ನಲ್ಲಿ ಮಂಗಳವಾರ ಲಿಂಗಾಯತ ಮುಖಂಡರ ಹಾಗೂ ಧಾರವಾಡ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಹಲವು ಲಿಂಗಾಯತ ನಾಯಕರು ಪಾಲ್ಗೊಂಡಿದ್ದರು. ಸಭೆ ಬಳಿಕ ಮಾತನಾಡಿರುವ ಯಡಿಯೂರಪ್ಪ ಅವರು, ಶೆಟ್ಟರ್’ಗೆ ನಾವು ಏನು ಅನ್ಯಾಯ ಮಾಡಿದ್ದೇವೆ. ವಿಶೇಷ ಕಾರಣಕ್ಕೆ ಅಭ್ಯರ್ಥಿ ಮಾಡಲಾಗುತ್ತಿಲ್ಲ. ಬದಲಾಗಿ ಕೇಂದ್ರದಲ್ಲಿ ಸಚಿವ ಸ್ಥಾನ, ಪತ್ನಿಗೆ ಟಿಕೆಟ್ ನೀಡುತ್ತೇವೆಂದು ಹೇಳಿದರೂ ಪಕ್ಷಕ್ಕೆ ದ್ರೋಹ ಎಸಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆಂದು ಕಿಡಿಕಾರಿದರು.
ಬಿಜೆಪಿ ಎಲ್ಲಾ ಅಧಿಕಾರವನ್ನು ನೀಡಿದಾಗಲೂ ಪಕ್ಷಕ್ಕೆ ದ್ರೋಹ ಮಾಡಿ ಕಾಂಗ್ರೆಸ್ ಸೇರಿರುವ ಜಗದೀಶ ಶೆಟ್ಟರ ಅವರಿಗೆ ತಕ್ಕಪಾಠ ಕಲಿಸಬೇಕು ಎಂದು ಕರೆ ನೀಡಿದರು.
ಸಮುದಾಯದ ಜನರು ಅಪಪ್ರಚಾರಕ್ಕೆ ಕಿವಿ ಕೊಡಬಾರದು. ಯಾವುದೇ ಸಮೀಕ್ಷೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಯಾರ ಬೆಂಬಲ ಕೇಳದೆ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದೇವೆ. ”ರಾಜ್ಯಕ್ಕೆ ಐದು ಬಾರಿ ಮೋದಿ ಬರಲಿದ್ದಾರೆ. ಯಾವ ಶಕ್ತಿ ಸಹ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಅಭ್ಯರ್ಥಿಗಳ ಗೆಲುವಿಗೆ ನಾವು ಶ್ರಮಿಸಬೇಕು. ಶೆಟ್ಟರ ಜತೆ ಇದ್ದವರನ್ನು ಕರೆಸಿ ಮಾತನಾಡಬೇಕು. ಅವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಪಕ್ಷದ ಅಭ್ಯರ್ಥಿ ಪರವಾಗಿ ಬುಧವಾರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಈ ರ್ಯಾಲಿಯಲ್ಲಿ ನಾನೂ ಪಾಲ್ಗೊಳ್ಳುತ್ತೇನೆ. ರಾಜಕೀಯ ದೊಂಬರಾಟ ಮಾಡುತ್ತಿರುವವರಿಗೆ ಪಾಠ ಕಲಿಸಬೇಕು. ರ್ಯಾಲಿಯಲ್ಲಿ ಪಾಲ್ಗೊಂಡ ಜನರ ಘೋಷಣೆಯಿಂದ ಮನೆಯಲ್ಲಿ ಕುಳಿತಿರುವ ಶೆಟ್ಟರ್ ಗೆ ನಡುಕ ಉಂಟಾಗಬೇಕು ಎಂದು ತಿಳಿಸಿದರು.