ಮಂಡ್ಯ: ಮಳವಳ್ಳಿ ತಾಲೂಕು ಹಲಗೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಒ ಸಿ.ರುದ್ರಯ್ಯ ಅವರು ಸದಸ್ಯ ಸುರೇಂದ್ರರವರ ನ್ಯಾಯ ಸಮ್ಮತವಲ್ಲದ ಕಾನೂನುಬಾಹಿರ ಬೇಡಿಕೆಗಳಿಗೆ ಸ್ಪಂದಿಸಲಿಲ್ಲವೆಂದು ಗ್ರಾಮ ಪಂಚಾಯಿತಿಯಲ್ಲಿ ಅಮಾನತು ಮಾಡಿಸುವುದಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಗ್ರಾಮ ಪಂಚಾಯಿತಿ ಸದಸ್ಯ ಸುರೇಂದ್ರ@ ಸಚಿನ್ ರವರನ್ನು ಕೂಡಲೇ ಬಂಧಿಸಿ ಇವರ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮಂಡ್ಯ ತಾಲೂಕು ಶಾಖೆಯ ಪದಾಧಿಕಾರಿಗಳು ಮಂಡ್ಯ ತಾಲೂಕು ತಹಸೀಲ್ದಾರ್ ಅವರ ಮೂಲಕ ಮನವಿ ಪತ್ರ ಸಲ್ಲಿಸಿದರು.
ಹಲಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ರುದ್ರಯ್ಯ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಇವರ ಬಳಿ ಸದಸ್ಯ ಸುರೇಂದ್ರ ನ್ಯಾಯ ಸಮ್ಮತವಲ್ಲದ ಬೇಡಿಕೆಗಳನ್ನು ಇಟ್ಟಿದ್ದು, ಆದರೆ ಅಧಿಕಾರಿ ಸ್ಪಂದಿಸದ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತು ಮಾಡಿಸುವುದಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾಗಾಗಿ ಪಂಚಾಯತಿ ಸದಸ್ಯ ಸುರೇಂದ್ರ ಅವರನ್ನು ಕೂಡಲೇ ಬಂಧಿಸಿ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದಲ್ಲದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾನಸಿಕ ಸ್ಥೈರ್ಯ ತುಂಬಿ ಗ್ರಾಮ ಪಂಚಾಯಿತಿಗಳಲ್ಲಿ ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ಕಲ್ಪಿಸಿಕೊಡಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಮಂಡ್ಯ ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಜಿ.ಎಸ್. ಸುನಿಲ್ಕುಮಾರ್,ಉಪಾಧ್ಯಕ್ಷೆ ಪವಿತ್ರ ಕೆ.ವೈ. ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್ ಸುರೇಶ್, ಖಜಾಂಚಿ ಸಿ.ಕೃಷ್ಣೇಗೌಡ ಸೇರಿದಂತೆ ಮತ್ತಿತರರು ಭಾಗವಹಿಸಿದರು.