ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆ ಹಾಗೂ ಬೆಂಗಳೂರಿನ ಸಿಐಡಿ ದಾಖಲಿಸಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ ಅರ್ಜಿಗಳನ್ನು ಪ್ರಜ್ವಲ್ ಪರ ವಕೀಲರು ಬುಧವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು.
ಆದರೆ, ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು. ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಅವರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿದರು.