ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಇಲ್ಲಿನ ಸಿದ್ದೇಶ್ಟರ ದೇಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿ ಕೊಳ್ಳಲಾಗಿದ್ದು, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ನಡೆಯಲಿದೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆಪಾದನೆ ಮಾಡಲಾಗಿದೆ. ವಿವಿಧ ಪ್ರಕರಣಗಳಲ್ಲಿ ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ ಸೇರಿ ಅನೇಕ ಬಿಜೆಪಿ ನಾಯಕರ ವಿರುದ್ದ ತನಿಖೆ ನಡೆಸಲು ಕೋರಿ ಮನವಿ ಮಾಡಿಕೊಂಡರೂ ಸಹ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ. ಆದರೆ, ರಾಜಕೀಯ ಒತ್ತಡದಿಂದ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹೆದರಲ್ಲ, ಕಾನೂನು ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಹಳ್ಳಿ, ಹಳ್ಳಿಗಳಲ್ಲಿ ಹೋರಾಟ ರೂಪಿಸುತ್ತೇವೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಲೋಣಿ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.