ಮನೆ ಉದ್ಯೋಗ ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿ ಆಗಿಲ್ಲ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್‌ 17ಕ್ಕೆ ಕಂಬಳ ನಡೆಯಲಿದೆ ಎಂದು ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

Join Our Whatsapp Group

ಬೆಂಗಳೂರು ಕಂಬಳ ಸಮಿತಿಗೆ ಕಂಬಳ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್ ಅನಿಮಲ್‌ (ಪೆಟಾ) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಬೆಂಗಳೂರು ಕಂಬಳ ಸಮಿತಿ ಪರ ವಕೀಲ ಎಂ. ವಿನೋದ್‌ ಕುಮಾರ್‌ ವಾದ ಮಂಡಿಸಿ ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಅಡ್ವೋಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಿ, ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿ ಆಗಿಲ್ಲ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಈ ತಿಂಗಳು 17ರಂದು ಕಂಬಳ ನಡೆಯಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ನಮಗೆ ದ.ಕ. ಜಿಲ್ಲೆಯಲ್ಲಿ ಅಥವಾ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ಆಕ್ಷೇಪವಿಲ್ಲ. ಆದರೆ ಪಿಲಿಕುಳದಲ್ಲಿ ಮೃಗಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ. ಅಷ್ಟೇ ಅಲ್ಲ, ಸ್ವತಃ ಮೃಗಾಲಯ ನಿರ್ದೇಶಕರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕಂಬಳದ ಸಂದರ್ಭದಲ್ಲಿ ಉಂಟಾಗುವ ಕೂಗಾಟದಿಂದ ಬೇರೆ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ. ನಮ್ಮದು ಸಹ ಅದೇ ವಾದವಾಗಿದೆ ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಬಗ್ಗೆ ಆಕ್ಷೇಪಣಿಗಳಿದ್ದರೆ ಸಲ್ಲಿಸುವಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್‌ 12ಕ್ಕೆ ಮುಂದೂಡಿತು.