ನವದೆಹಲಿ: ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಇಂಧನ ದರ ಏರಿಕೆಯ ಶಾಕ್ ಎದುರಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿವರೆಗೆ ಹೆಚ್ಚಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಬೆಳಗ್ಗೆ ಇಂಧನ ದರ ಏರಿಕೆ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದು, ಹೊಸ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆ, ಮಧ್ಯಪ್ರಾಚ್ಯ ಸಂಘರ್ಷ ಹಾಗೂ ಪೂರೈಕೆ ಒತ್ತಡದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯಾವಾರು ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ ಸುಮಾರು 3 ರೂಪಾಯಿ ಏರಿಕೆಯಾಗಿದ್ದು, ಡೀಸೆಲ್ ದರವೂ ಹೆಚ್ಚಳವಾಗಿದೆ. ದೇಶದ ಪ್ರಮುಖ ನಗರಗಳಲ್ಲಿಯೂ ಇಂಧನ ದರ ಏರಿಕೆ ಜನರಲ್ಲಿ ಆತಂಕ ಮೂಡಿಸಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟು?
ಬೆಂಗಳೂರು ನಗರದಲ್ಲಿ ಪೆಟ್ರೋಲ್ ದರ ಲೀಟರ್ ಗೆ 3.27 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ 102.90 ರೂಪಾಯಿ ಇದ್ದ ಪೆಟ್ರೋಲ್ ದರ ಇದೀಗ 106.17 ರೂಪಾಯಿಗೆ ತಲುಪಿದೆ. ಅದೇ ರೀತಿ ಡೀಸೆಲ್ ದರ ಲೀಟರ್ ಗೆ 3.12 ರೂಪಾಯಿ ಏರಿಕೆಯಾಗಿದ್ದು, 90.98 ರೂಪಾಯಿಯಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಇಂಧನ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಸಾರಿಗೆ ಕ್ಷೇತ್ರದ ಮೇಲೂ ಹೆಚ್ಚುವರಿ ಹೊರೆ ಬೀಳಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ
ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್ ಗೆ 108.74 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ದರ 95.13 ರೂಪಾಯಿಗೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ದರ 106.68 ರೂಪಾಯಿ ಆಗಿದ್ದು, ಡೀಸೆಲ್ ಬೆಲೆ 93.14 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ 103.67 ರೂಪಾಯಿ ಆಗಿದ್ದು, ಡೀಸೆಲ್ ದರ 95.25 ರೂಪಾಯಿಗೆ ತಲುಪಿದೆ.
ಕಚ್ಚಾ ತೈಲ ಬೆಲೆ ಏರಿಕೆ ಪರಿಣಾಮ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗುತ್ತಿರುವುದು ಭಾರತದಲ್ಲಿಯೂ ಇಂಧನ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ, ಯುದ್ಧ ಭೀತಿ ಹಾಗೂ ಇಂಧನ ಪೂರೈಕೆ ಸಮಸ್ಯೆಗಳು ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿವೆ. ಈ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ದೀರ್ಘಕಾಲದಿಂದ ಬೆಲೆ ಏರಿಕೆ ತಪ್ಪಿಸಲು ಪ್ರಯತ್ನಿಸಿದ್ದರೂ ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ.
ಅಬಕಾರಿ ಸುಂಕ ಕಡಿತ ಮಾಡಿದರೂ ದರ ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈ ಹಿಂದೆ ಅಬಕಾರಿ ಸುಂಕ ಕಡಿತ ಮಾಡಿತ್ತು. 2026ರ ಮಾರ್ಚ್ 27 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 10 ರೂಪಾಯಿವರೆಗೆ ಇಳಿಕೆ ಮಾಡಲಾಗಿತ್ತು. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ನಿರಂತರ ಏರಿಕೆಯಾಗುತ್ತಿರುವುದರಿಂದ ಗ್ರಾಹಕರಿಗೆ ಹೆಚ್ಚಿನ ಪ್ರಯೋಜನ ದೊರಕಲಿಲ್ಲ.
ತೈಲ ಕಂಪನಿಗಳಿಗೆ ಭಾರೀ ನಷ್ಟದ ಆತಂಕ
ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಕಚ್ಚಾ ತೈಲ ಬೆಲೆ ಇದೇ ರೀತಿ ಏರಿಕೆಯಾಗುತ್ತಿದ್ದರೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಭಾರೀ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಂಧನ ದರ ಪರಿಷ್ಕರಣೆ ಮಾಡದಿದ್ದರೆ ಒಂದೇ ತ್ರೈಮಾಸಿಕದಲ್ಲಿ ಸುಮಾರು 1 ಲಕ್ಷ ಕೋಟಿ ರೂಪಾಯಿ ನಷ್ಟವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

















