ಬೆಂಗಳೂರು(Bengaluru): ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ/ವಿಡಿಯೋ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯ ನೌಕರರ ಸಂಘದ ಮನವಿ ಮೇರೆಗೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಆದೇಶ ಹೊರಡಿಸಿದೆ.
ರಾಜ್ಯ ನೌಕರರ ಸಂಘ ತಮ್ಮ ಮನವಿಯಲ್ಲಿ, ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವರು ಕಚೇರಿಯ ಫೋಟೋ/ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಇಲಾಖೆ, ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ.
ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡದಂತೆ ನಿರ್ಬಂಧಿಸುವಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸದರಿ ಆದೇಶ ಹೊರಡಿಸಲಾಗಿದೆ.