ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮಂಗಳೂರು ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಎಂ.ಎಚ್.ತುಫೈಲ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್’ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ತುಫೈಲ್, 2022ರ ಜುಲೈ 26ರಂದು ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದ. ಈತನ ಪತ್ತೆಗೆ 5 ಲಕ್ಷ ಬಹುಮಾನ ಘೋಷಿಸಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿಶನಿವಾರ ರಾತ್ರಿ ಆರೋಪಿ ಯನ್ನು ಬಂಧಿಸಲಾಗಿದೆ.
ಬಂಧಿತ ತುಫೈಲ್ ನಿಷೇಧಿತ ಪಿಎಫ್’ಐ ಸಂಘಟನೆಯ ಕೊಡಗು ಜಿಲ್ಲಾ ಘಟಕದ ಮಾಜಿ ಕಾರ್ಯದರ್ಶಿ ಹಾಗೂ ಪ್ರವೀಣ್ ಹತ್ಯೆಗಾಗಿ ಪಿಎಫ್’ಐ ರಚಿಸಿಕೊಂಡಿದ್ದ ಸೇವಾ ತಂಡದ (ಹಿಟ್ ಟೀಮ್) ಕೊಡಗು ಜಿಲ್ಲೆಯ ಮುಖ್ಯಸ್ಥನಾಗಿದ್ದ ಎಂದು ಎನ್’ಐಎ ಮೂಲಗಳು ತಿಳಿಸಿವೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್’ಐ) ಸಂಘಟನೆ ಸದಸ್ಯರಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಡಾಜೆ ಮಹಮ್ಮದ್ ಶರೀಫ್, ನೆಕ್ಕಿಲಾಡಿಯ ಕೆ.ಎ.ಮಸೂದ್, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದ ಎಸ್.ಮೊಹಮ್ಮದ್ ಮುಸ್ತಾಫ ಅಲಿಯಾಸ್ ಮುಸ್ತಾಫ ಪೈಚಾರು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೂ ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿವೆ.