ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಹೆಚ್ಚಿರಲಿದೆ.
ಇಂದಿನಿಂದ ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವೆಡೆ ಪ್ರತಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದ್ದು, ಜನರು ಎಚ್ಚರಿಕೆಯಿಂದಿರುವಂತೆ ತಿಳಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಎರಡ್ಮೂರು ದಿನಗಳಿಂದ ಈ ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
ಗದಗ ನಗರ ಹಾಗೂ ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ 20 ನಿಮಿಷಕ್ಕೂ ಹೆಚ್ಚು ಕಾಲ ಉತ್ತಮ ಮಳೆಯಾಗಿದೆ. ಮಳೆಯೊಂದಿಗೆ ಬೀಸಿದ ಗಾಳಿ ಹಾಗೂ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಲಕ್ಷ್ಮೇಶ್ವರ ತಾಲೂಕಿನಲ್ಲಿ ಎರಡು ದಿನಗಳಿಂದ ಮುಂಗಾರು ಪೂರ್ವ ಮಳೆಯು ಚುರುಕಾಗಿದ್ದು. ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹಿಂಗಾರು ಹಂಗಾಮಿನಲ್ಲಿ ಹೊಲಗಳನ್ನು ಹಸನು ಮಾಡಿಟ್ಟುಕೊಂಡು ಮುಂಗಾರು ಮಳೆಗಾಗಿ ಕಾಯುತ್ತಿರುವ ರೈತರಿಗೆ ಈ ಮಳೆ ಸಂತಸ ತಂದಿದೆ.
ಕೋಲಾರದಲ್ಲಿ ಶುಕ್ರವಾರ ಮಧ್ಯಾಹ್ನ ವರುಣನ ಆಗಮನವಾಗಿದೆ. ಜೋರು ಮಳೆಯಿಂದ ಹಲವು ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನಾದ್ಯಂತ ಸಾಧಾರಣ ಮಳೆಯಾಗಿದೆ.
ಹಾವೇರಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ವಿಜಯನಗರದ ಕೊಟ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶ, ಬಳ್ಳಾರಿಯ ಸಂಡೂರು ತಾಲೂಕಿನ ವಿವಿಧೆಡೆ ಗುರುವಾರ ರಾತ್ರಿ ಮಳೆ ಸುರಿದಿದೆ.