ನವದೆಹಲಿ(NewDelhi): ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.
ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ತಮ್ಮ ನಾಮಪತ್ರ ಸಲ್ಲಿಸಲು ಸಂಸತ್ತಿಗೆ ಆಗಮಿಸಿದ್ದು, ಸಂಸತ್ತಿನಲ್ಲಿ ಮಹಾತ್ಮ ಗಾಂಧಿ, ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಬಿರ್ಸಾ ಮುಂಡಾ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.
ಮುರ್ಮು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ಸಂಸದರು ಉಪಸ್ಥಿತರಿದ್ದರು.
ಚುನಾವಣೆ ನಡೆಯುವುದು ಯಾವಾಗ?: 16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ.